ಬೋಪಾಲ್, ಮಾ 20 ( Daijiworld News/MSP): ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಯ ಸೋಲಿನಿಂದಾಗುವ ಮುಖಭಂಗವನ್ನು ತಪ್ಪಿಸಿಕೊಳ್ಳುವ ಉದ್ದೇಶದಿಂದ ಬಹುಮತ ಸಾಬೀತಿಗೂ ಮುನ್ನವೇ ಸಿಎಂ ಕಮಲ್ನಾಥ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಕರ್ನಾಟಕ ರಾಜಕೀಯದಲ್ಲಿ ಎದುರಾದ ಪರಿಸ್ಥಿತಿಯಂತೆ, ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಬಜೆಟ್ ಅಧಿವೇಶನವನ್ನು ಸ್ಪೀಕರ್ ಪ್ರಜಾಪತಿ ಅವರು ಕೊರೊನಾ ವೈರಸ್ ಭೀತಿಯ ನೆಪವೊಡ್ಡಿ ಬಹುಮತ ಸಾಬೀತುಪಡಿಸಲು ಆದೇಶ ನೀಡದೆ ಕಲಾಪ ಮುಂದೂಡಿದ್ದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಸುಪ್ರೀಂಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಸಿಎಂ ಕಮಲ್ನಾಥ್ ಗುರುವಾರ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತುಪಡಿಸಬೇಕಾಗಿತ್ತು. ಆದರೆ ಅದಕ್ಕೂ ಮೊದಲೇ ಪತ್ರಿಕಾಗೋಷ್ಟಿ ನಡೆಸಿದ ಬಿಜೆಪಿಯು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿ ಕಮಲ್ನಾಥ್ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದರು.
ಸದನದಲ್ಲಿ ವಿಶ್ವಾಸಮತ ಯಾಚನೆ ವೇಳೆ ಎದುರಾಗುವ ಮುಜುಗರವನ್ನು ತಪ್ಪಿಸಿಕೊಳ್ಳಲು ಕಮಲ್ನಾಥ್ ರಾಜೀನಾಮೆ ನೀಡಿದ್ದಾರೆ. ಇತ್ತ 107 ಸ್ಥಾನವನ್ನು ಹೊಂದಿರುವ ಬಿಜೆಪಿ ಅಧಿಕಾರ ಹಿಡಿಯುವತ್ತ ಗೆಲುವಿನ ನಗೆ ಬೀರಿದೆ.