ಧಾರವಾಡ, ಮಾ.22 (Daijiworld News/MB) : ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಧೃಡಪಟ್ಟಿದ್ದು, ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಪ್ರಕರಣ ಪತ್ತೆಯಾದ ಸ್ಥಳದಲ್ಲಿ ನಿಯಮಾನುಸಾರ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ.
ಸೋಂಕಿತ ವ್ಯಕ್ತಿಯು ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ ಎಂದು ಧಾರವಾಡ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
33 ವರ್ಷದ ಈ ವ್ಯಕ್ತಿಯು ವಿದೇಶ ಪ್ರವಾಸ ಮಾಡಿ ಮಾರ್ಚ್ 12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು. ವ್ಯಕ್ತಿಯಲ್ಲಿ ಶಂಕಿತ ಕೊರೊನಾದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಮಾರ್ಚ್ 18 ರಂದು ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು.
ಅದೇ ದಿನ ಅವರ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದ್ದು ಇದೀಗ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.