ಬೆಂಗಳೂರು, ಮಾ.25 (DaijiworldNews/PY) : ಪ್ರಧಾನಿ ಮೋದಿ ಅವರು ದೇಶಾದ್ಯಂತ ಲಾಕ್ಡೌನ್ ಮಾಡುವಂತೆ ಆದೇಶ ಮಾಡಿದ ಬೆನ್ನಲ್ಲೇ, ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಪೊಲೀಸರು ಮನೆಯಿಂದ ಹೊರಬಂದವರಿಗೆ ಲಾಠಿ ಚಾರ್ಜ್ ಮಾಡಿದರೆ, ಇಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದಿದೆ.
ಕೆಲ ಕಿಡಿಗೇಡಿಗಳು ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಪೊಲೀಸರು ಲಾಕ್ಡೌನ್ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ನಲ್ಲಿ ಗಾಡಿ ತಪಾಸಣೆ ಮಾಡಿದ್ದಾರೆ. ಮನೆಯಿಂದ ಹೊರಬಂದಿದ್ದಕ್ಕೆ ಸಾರ್ವಜನಿಕರನ್ನು ಪ್ರಶ್ನೆ ಮಾಡಿದ್ದಾರೆ. ಇದರಿಂದ ಸಿಟ್ಟುಗೊಂಡ ಕಿಡಿಗೇಡಿಗಳು ಪೊಲೀಸರನ್ನು ನೆಲಕ್ಕೆ ತಳ್ಳಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಘಟನೆಯಿಂದಾಗಿ ಪೊಲೀಸ್ ಪೇದೆಗಳಿಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ಧಾರೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು, ನಮಗೋಸ್ಕರ ಪೊಲೀಸರು ಎಲ್ಲಾ ಅಪಾಯಗಳನ್ನು ಎದುರಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕಳೆದ ಒಂದು ವಾರದಿಂದ ವಿಶ್ರಾಂತಿ ಇಲ್ಲದೇ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.