ನವದೆಹಲಿ, ಮಾ.30 (Daijiworld News/MB) : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ದೇಶದಲ್ಲಿ 21 ದಿನಗಳ ಕಾಲ ಲಾಕ್ಡೌನ್ ಮಾಡಲಾಗಿದ್ದು ಅದನ್ನು ವಿಸ್ತರಿಸುವ ಯಾವುದೇ ಆಲೋಚನೆಯಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬ ಸ್ಪಷ್ಟಪಡಿಸಿದ್ದಾರೆ.
ಲಾಕ್ಡೌನ್ ವಿಸ್ತರಣೆ ಮಾಡಲಾಗುತ್ತದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ನಮಗೆ ಅಂಥ ಯಾವ ಆಲೋಚನೆಯೂ ಇಲ್ಲ ಎಂದು ಹೇಳಿದ್ದಾರೆ.
ಭಾರತದಲ್ಲಿ ಸೋಮವಾರ 1000 ಕೊರೊನಾ ಪ್ರಕರಣಗಳು ವರದಿಯಾಗಿತ್ತು. ವಿಶ್ವದ ಇತರೆಡೆ ಕೊರೊನಾ ಹೆಚ್ಚಾಗಿರುವುದನ್ನು ಗಮನಿಸಿದಾಗ ಈ ವಾರ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ಗೌಬಾ ಅವರು ಕಳೆದ ವಾರವಷ್ಟೇ ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿದ್ದು ಜನವರಿ 18ರ ಬಳಿಕ ವಿದೇಶದಿಂದ ಬಂದು ದೇಶದಲ್ಲಿರುವ 15 ಲಕ್ಷಕ್ಕೂ ಹೆಚ್ಚು ಮಂದಿಯ ಜಾಡು ಪತ್ತೆ ಹಚ್ಚುವಂತೆ ಸೂಚಿಸಿದ್ದರು.
ಹಾಗೆಯೇ ಈ ಸಂದರ್ಭದಲ್ಲಿ ವಿವಿಧ ದೇಶಗಳಿಂದ ಭಾರತಕ್ಕೆ ಬಂದ ಒಟ್ಟು ಪ್ರಯಾಣಿಕರ ಸಂಖ್ಯೆಗೂ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪ್ರಸ್ತುತ ನಿಗಾ ಇರಿಸಿರುವ ಜನರ ಸಂಖ್ಯೆಗೂ ಸಾಕಷ್ಟು ಅಂತರವಿದೆ ಎಂಬುದನ್ನು ಅವರನ್ನು ಒಪ್ಪಿಕೊಂಡಿದ್ದರು.
'18ನೇ ಜನವರಿಯ ನಂತರ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ. ವಲಸೆ ವಿಭಾಗದ ಅಧಿಕಾರಿಗಳು 15 ಲಕ್ಷಕ್ಕೂ ಹೆಚ್ಚು ಜನರು ದೇಶಕ್ಕೆ ಬಂದಿರುವ ಮಾಹಿತಿ ನೀಡಿದ್ದಾರೆ. ಇವರೆಲ್ಲರ ಮಾಹಿತಿಯನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದರು.