ಬಳ್ಳಾರಿ, ಮಾ 31 (Daijiworld News/MSP): ಕೊರೊನಾ ನಿಯಂತ್ರಣಕ್ಕಾಗಿ ದೇಶದೆಲ್ಲೆಡೆ ಲಾಕ್ ಡೌನ್ ಬಳಿಕ ರಾಜ್ಯಾದ್ಯಂತ ಸಂಪೂರ್ಣ ಮದ್ಯ ಮಾರಾಟ ಬಂದ್ ಮಾಡಲಾಗಿದ್ದು, ಇದು ಮದ್ಯವ್ಯಸನಿಗಳಿಗೆ ನುಂಗಲಾದ ತುತ್ತಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಅಲ್ಲಲ್ಲಿ ಕಳ್ಳಬಟ್ಟಿ ದಂಧೆ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಈ ನಡುವೆ ಬಳ್ಳಾರಿಯ ಸಿರಗುಪ್ಪದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಲ್ಲಿಗೆ ದಾಳಿ ನಡೆಸಿ ವಶಪಡಿಸಿಕೊಂಡು ಅಬಕಾರಿ ಇಲಾಖೆಯ ಕಚೇರಿಯಲ್ಲಿಟ್ಟಿದ್ದ ಮದ್ಯದ ಬಾಕ್ಸ್ ಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಿರಗುಪ್ಪದಲ್ಲಿ ಸರ್ಕರದ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡು ಕಚೇರಿಯಲ್ಲಿ ಸಂಗ್ರಹಿಸಿಟ್ಟಿದ್ದರು. ಆದರೆ ಕಳ್ಳರು ಕಚೇರಿಯ ಹೆಂಚುಗಳನ್ನು ತೆಗೆದು ಒಳನುಗ್ಗಿ ಸಾವಿರಾರು ರೂ. ಮೌಲ್ಯದ ಮದ್ಯದ ಬಾಟಲ್ಗಳುಳ್ಳ ಬಾಕ್ಸ್ಗಳನ್ನ ದೋಚಿ ಪರಾರಿಯಾಗಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಬಕಾರಿ ಇಲಾಖೆಯ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.