ಬೆಂಗಳೂರು, ಏ 03 (DaijiworldNews/SM): ಕಳೆದ ಎರಡು ಮೂರು ದಿನಗಳಿಂದ ಭಾರೀ ಸುದ್ದಿಯಲ್ಲಿರುವ ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಈ ನಡುವೆ ಸಭೆಯಲ್ಲಿ ಭಾಗವಹಿಸಿದ್ದ ಕರ್ನಾಟಕದ 13 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಟ್ವೀಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಈಗಾಗಲೇ ಸಮಾವೇಶದಲ್ಲಿ ಭಾಗವಹಿಸಿದ ಕರ್ನಾಟಕದ ಸುಮಾರು ಹದಿಮೂರು ಮಂದಿಯಲ್ಲಿ ಸೋಂಕು ದೃಢಪಟ್ಟಿರುವುದರಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಇನ್ನು ಈ ನಡುವೆ ಇದೇ ಸಮಾವೇಶದಲ್ಲಿ ಭಾಗವಹಿಸಿರುವ 187 ಮಂದಿಯ ವೈದ್ಯಕೀಯ ತಪಾಸಣೆ ವರದಿ ನೆಗೆಟಿವ್ ಬಂದಿದೆ. ಇನ್ನೂ 88 ಮಂದಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂಬುವುದಾಗಿ ಅವರು ತಿಳಿಸಿದ್ದಾರೆ. ಈ ನಡುವೆ ರಾಜ್ಯದಲ್ಲಿ ಇಲ್ಲಿಯ ತನಕ ಒಟ್ಟು ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.