ಬೆಂಗಳೂರು, ಎ.06 (DaijiworldNews/MSP): ಬೇಸಿಗೆ ಬಿಸಿಲಿನ ತಾಪ ಏರಿಕೆಯಾಗುತ್ತಿರುವ ವೇಳೆಯಲ್ಲಿ ಏ.7ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಮಾವಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಅವರು ನೀಡಿದ ಮಾಹಿತಿಯಂತೆ ಏ. 7ರ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆ ಸುರಿಯುವ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದ್ದು, ಎ.7 ಮತ್ತು 8ರಂದು ರಾಜ್ಯದ ವಿವಿಧೆಡೆ ವರುಣ ಅಬ್ಬರಿಸಲಿದ್ದಾನೆ.
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ, ಹಾಸನ, ಕೊಡಗು ಮತ್ತು ಮೈಸೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಕಳೆದ 15 ದಿನಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳ ಸರಾಸರಿ ತಾಪಮಾನ ಕನಿಷ್ಠ 35 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ರಣಬಿಸಿಲಿನ ತಾಪದಿಂದ ಬಸವಳಿದಿದ್ದ ರಾಜ್ಯದಲ್ಲಿ ಹಲವೆಡೆ ಗುಡುಗು, ಸಿಡಿಲು, ಗಾಳಿ ಸಹಿತ ಸುರಿದ ಭಾರೀ ಮಳೆಯಾಗುವ ಮನ್ಸೂಚನೆ ಇದೆ