ಬೆಂಗಳೂರು, ಎ.10 (Daijiworld News/MB) : ಕೊರೊನಾ ಹರಡಲು ಮುಸ್ಲಿಮರೇ ಕಾರಣ ಎಂದು ಆರೋಪ ಮಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಇಬ್ಬರು ಶಾಸಕರ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಶುಕ್ರವಾರ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದೆ.
ಶುಕ್ರವಾರ ಬೆಂಗಳೂರಿನ ಪೊಲೀಸ್ ಕೇಂದ್ರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ಎಂ.ಸಿ. ವೇಣುಗೋಪಾಲ್ ಅವರನ್ನೊಳಗೊಂಡ ಕಾಂಗ್ರೆಸ್ ನಿಯೋಗವು ಭೇಟಿ ಮಾಡಿದೆ.
ಕೊರೊನಾ ಹರಡುತ್ತಿರುವ ಕುರಿತಾಗಿ ವದಂತಿಗಳನ್ನು ಹಬ್ಬಿಸುತ್ತಿರುವ ಜೊತೆಗೆ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಲು ಯತ್ನಿಸುತ್ತಿರುವ ಸಚಿವರಾದ ಅನಂತಕುಮಾರ ಹೆಗಡೆ, ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ, ಶೋಭಾ ಕರಂದ್ಲಾಜೆ ವಿರುದ್ಧ ಐಪಿಸಿ ಕಲಂ 153 A ಪ್ರಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಅವರನ್ನು ತಕ್ಷಣ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರವಾಗಿ ಮನವಿ ಸಲ್ಲಿಸಿದರು.