ಶಿವಮೊಗ್ಗ, ಎ.11 (DaijiworldNews/PY) : ವಾರದೊಳಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿ ಬಾಕಿ ಇರುವ ಎಲ್ಲಾ ಮೊತ್ತವನ್ನು ಪಾವತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ನದಿ ಪುನಶ್ಚೇತನ ಕಾರ್ಯಕ್ರಮ ಅನುಷ್ಠಾನ ಕುರಿತು ಪಿಡಿಒ, ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಪ್ರತಿನಿಧಿಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬಾಕಿ ಅನುದಾನ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಮುಂಗಡವಾಗಿ ಜಿಲ್ಲೆಗೆ ಇನ್ನೂಒಂದು ಸಾವಿರ ಕೋಟಿ ರೂಗಳನ್ನು ಹೊಸ ಕಾಮಗರಿಗಳನ್ನು ಕೈಗೊಳ್ಳಲು ಬಿಡುಗಡೆ ಮಾಡಿದೆ. ಕೂಲಿ ಮೊತ್ತವನ್ನು ಕೊರೊನಾ ಭೀತಿ ಹಿನ್ನಲೆ ರೂ. 249ರಿಂದ 275ಕ್ಕೆ ಹೆಚ್ಚಿಸಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಠಿ ಮಾಡಬೇಕು. ಕೂಲಿ ಹಣವನ್ನು ವಾರದೊಳಗಾಗಿ ಪಾವತಿಸಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
5 ಜನರ ತಂಡಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ರಚಿಸಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಗುಂಪಾಗಿ ಕೆಲಸ ಮಾಡದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೆಲಸ ಮಾಡಬೇಕು. ನದಿ ಪುನಶ್ಚೇತನ ಯೋಜನೆಯಡಿ, ಮಳೆ ನೀರು ಹರಿದು ಪೋಲಾಗಿ ಹೋಗದೆನೆಲದ ಒಳಗೆ ಪ್ರತಿ ಹನಿ ಇಂಗುವಂತಹ ಕಾಮಾಗಾರಿಗಳನ್ನು ನಡೆಸಲಾಗುತ್ತದೆ. ಇದಕ್ಕಾಗಿ, ಇಂಗು ಗುಂಡಿಗಳ ರಚನೆ, ಮಣ್ಣಿನ ಸವಕಳಿ ತಡೆಯುವುದು, ಗಿಡ ಮರ ಬೇಳೆಸುವುದು ಸೇರದಂತೆ ಎಲ್ಲಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ಕಳೆದ ವಾರ ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಕಳೆದ ವಾರ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಮೆಗ್ಗಾನ್ ಭೋಧನಾ ಆಸ್ಪತ್ರೆ ನಿರ್ದೇಶಕ ಡಾ.ಲೇಪಾಕ್ಷಿ ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವೇ ಈ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಹಾಗಾಗಿ ಸಿಎಂ ಬಿಎಸ್ವೈ ಅವರು ಡಾ.ಲೇಪಾಕ್ಷಿ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿಸಿದರು.
ಮೊನ್ನೆ ಬೆಂಗಳೂರಿನಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಅವರು ಅಮಾನತು ತೀರ್ಮಾನ ಕೈಗೊಂಡಿದ್ದಾರೆ. ಅವರ ಸ್ಥಾನಕ್ಕೆ ಮತ್ತೊಬ್ಬರು ಸಮರ್ಥರನ್ನು ಶೀಘ್ರವೇ ನೇಮಕ ಮಾಡಲಾಗುವುದು ಎಂದು ಹೇಳಿದರು.