ನವದೆಹಲಿ, ಏ 14 (Daijiworld News/MSP): ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1,211 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ದೇಶದಲ್ಲಿ ಒಟ್ಟು ಈವರೆಗೆ ದೃಡಪಟ್ಟ ಪ್ರಕರಣಗಳ ಸಂಖ್ಯೆ 10,363 ಕ್ಕೆ ತಲುಪಿದ್ದು, ಒಟ್ಟು 339 ಸಾವುಗಳು ಸಂಭವಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್ ಮಂಗಳವಾರ ತಿಳಿಸಿದ್ದಾರೆ.
ದೈನಂದಿನ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಗರ್ವಾಲ್ , ಕೊರೊನಾ ಸೋಂಕಿತ 1,036 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 31 ಜನರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.
ಕೊರೊನಾ ಹರಡುವಿಕೆಯ ಬಗ್ಗೆ ಪ್ರತಿ ಜಿಲ್ಲೆ ಮತ್ತು ನಗರವನ್ನು ಏಪ್ರಿಲ್ 20 ರವರೆಗೆ ಮೌಲ್ಯಮಾಪನಕ್ಕೆ ಒಳಪಡಿಸಲಾಗುವುದು. ಈ ನಗರಗಳಲ್ಲಿ ಮತ್ತು ಜಿಲ್ಲೆಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂಬುದನ್ನು ಮೌಲ್ಯಮಾಪನ ಮಾಡಲಾಗುವುದು ಅವರು ಹೇಳಿದರು.
"ಈ ಮೌಲ್ಯಮಾಪನ ಫಲಿತಾಂಶಗಳ ಆಧಾರದ ಮೇಲೆ, ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಜಿಲ್ಲೆಗಳು ಮತ್ತು ನಗರಗಳಿಗೆ ಕೆಲವು ಆಯ್ದ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದು. ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ನೀಡಲಾಗುವುದು" ಎಂದು ಅವರು ಹೇಳಿದರು.