ಬೆಂಗಳೂರು, ಏ 20 (Daijiworld News/MSP): ಪಾದರಾಯನಪುರದ ಘಟನೆ ಕುರಿತಂತೆ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವರು, " ಪಾದರಾಯನಪುರದಲ್ಲಿ ಭಾನುವಾರ ಕೊರೋನಾ ಶಂಕಿತರನ್ನು ಹೋಂ ಕ್ವಾರಂಟೈನ್ ಗೆ ಕರೆದುಕೊಂಡು ಹೋಗುತ್ತಿದ್ದ ಸರ್ಕಾರಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯಕರ್ತೆಯರ ಮೇಲೆ ಸ್ಥಳೀಯ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಇ ಕುರಿತು ಸಮಗ್ರ ತನಿಖೆ ಅವಶ್ಯಕತೆ ಇದೆ. ಹೀಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ ಸಿಸಿಬಿ ಪೊಲೀಸರ ತಂಡ ತನಿಖೆಯನ್ನು ನಡೆಸಿ ವರದಿ ಸಲ್ಲಿಸಲಿದೆ ಎಂದಿದ್ದಾರೆ.
ಸಿಸಿಬಿ ತನಿಖೆಯ ಸಮಗ್ರ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ದ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ ಸಚಿವರು, ಅಗತ್ಯ ಬಿದ್ದರೆ ಶಾಸಕ ಜಮೀರ್ ಅಹ್ಮದ್ ತನಿಖೆ ಒಳಪಡಿಸಿ ,ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದರು.
ಹಲ್ಲೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾರ್ಯಾಚರಣೆಗೆ ತೊಡಗಿದ್ದು 8 ತಂಡಗಳು ಕಾರ್ಯನಿರ್ವಹಿಸುತ್ತಿದ್ದು, 59 ಜನರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಒಟ್ಟು 5 ಪ್ರಕರಣ ದಾಖಲಾಗಿದ್ದು, ಗಲಾಟೆಗೆ ಸಂಬಂಧಿಸಿದ100ಕ್ಕೂ ಹೆಚ್ಚು ಜನರನ್ನು ಗುರುತಿಸಲಾಗಿದ್ದು, ಉಳಿದವರ ಪತ್ತೆ ಕಾರ್ಯ ನಡೆಯುತ್ತಿದೆ.