ಬೆಂಗಳೂರು, ಎ.26 (Daijiworld News/MB) : ಕೊರೊನಾ ಲಾಕ್ಡೌನ್ ನಡುವೆಯೂ ಕಲಬುರಗಿ ಜಿಲ್ಲೆಯ ರಾವೂರ್ ಮತ್ತು ಭೂಸನೂರಿನಲ್ಲಿ ರಥೋತ್ಸವ ಆಚರಿಸಿದ ಆಯೋಜಕರ ವಿರುದ್ಧವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಯಾಕೆ ಎಫ್ಐಆರ್ ದಾಖಲಿಸಿಕೊಂಡಿಲ್ಲ ಎಂದು ಪ್ರಶ್ನಿಸಿದ ಹೈಕೋರ್ಟ್ ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.
ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು.
ಈ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ಲಿಖಿತ ವಾದ ಮಂಡಿಸಿದ್ದು, ಈಗಾಗಲೇ ಎ. 9 ರಂದು ಲಾಕ್ಡೌನ್ ಸಂದರ್ಭದಲ್ಲಿ ಧಾರ್ಮಿಕ ಜಾತ್ರೆ, ಉತ್ಸವಗಳನ್ನು ತಡೆಯುವಂತೆ ಜಿಲ್ಲಾಧಿಕಾರಿಗಳು ಮ್ಯಾಜಿಸ್ಟ್ರೇಟ್ಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಿ ಮಠದ ಕಾರ್ಯದರ್ಶಿ ಸಹಿತ 22 ಮಂದಿಯನ್ನು ಬಂಧನ ಮಾಡಲಾಗಿದೆ. ಹಾಗೆಯೇ ವಲಯ ಮ್ಯಾಜಿಸ್ಟ್ರೇಟ್ ಅವರನ್ನು ಅಮಾನತು ಮಾಡಿ ಸಂಬಂಧಪಟ್ಟ ಉಪವಿಭಾಗಾಧಿಕಾರಿ, ತಹಶೀಲ್ದಾರ್, ಗ್ರಾಮ ಲೆಕ್ಕಿಗ, ಕಂದಾಯ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ರಥೋತ್ಸವ ಆಯೋಜನೆ ಮಾಡಿದವರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಪ್ರಕರಣ ಯಾಕೆ ದಾಖಲಿಸಿಲ್ಲ? ಕೇವಲ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಿರುವುದು ಯಾಕೆ ? ಎಂದು ಅಸಮಾಧಾನ ವ್ಯಕ್ತ ಪಡಿಸಿದ ಹೈಕೋರ್ಟ್ ಈ ಬಗ್ಗೆ ವಿವರಣೆ ನೀಡಿ ಎಂದು ಸರ್ಕಾರಕ್ಕೆ ಸೂಚನೆ ನೀಡಿತು.