ಬೆಂಗಳೂರು, ಏ 30(Daijiworld News/MSP): ಮುಂದಿನ ಶೈಕ್ಷಣಿಕ ವರ್ಷಕ್ಕೆ ಶಾಲೆಗಳ ಶುಲ್ಕ ಹೆಚ್ಚಳ ಮಾಡುವಂತಿಲ್ಲಎಂದು ಖಾಸಗಿ ಶಾಲಾಡಳಿತ ಮಂಡಳಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020 -21 ನೇ ಸಾಲಿಗೆ ಶುಲ್ಕ ಹೆಚ್ಚಳ ಮಾಡಬಾರದು. ಕಳೆದ ಸಾಲಿನಲ್ಲಿ ಪಡೆದ ಶುಲ್ಕಕ್ಕಿಂತ ಕಡಿಮೆ ಶುಲ್ಕ ಪಡೆಯಲು ಇಚ್ಛಿಸಿದಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.
ಶಿಕ್ಷಣ ಇಲಾಖೆಯ ಆಯುಕ್ತ ಡಾ. ಕೆ.ಜೆ. ಜಗದೀಶ್ ಸುತ್ತೋಲೆ ಹೊರಡಿಸಿದ್ದು, ಯಾವುದೇ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ ನೀಡಿದ್ದಾರೆ.
ಕೊರೊನಾ ಮಾಹಾಮಾರಿ ಹಿನ್ನಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಪೋಷಕರು ಶಾಲಾ ಶುಲ್ಕ ಪಾವತಿಸಲು ಪರಿತಪಿಸುವಂತಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕ ಶೇಕಡಾ 15 ರ ಮಿತಿಯೊಳಗೆ ಬೋಧನಾ ಶುಲ್ಕ ಹೆಚ್ಚಳ ಮಾಡಲು ಅವಕಾಶವಿದೆ. ಈ ಬಾರಿ ಶುಲ್ಕ ಹೆಚ್ಚಳ ಮಾಡದಂತೆ ತಿಳಿಸಲಾಗಿದೆ.
ಅಲ್ಲದೆ ಮಾರ್ಚ್, ಏಪ್ರಿಲ್ ತಿಂಗಳ ಶುಲ್ಕ ಪಾವತಿಸಲು ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಒತ್ತಡ ಹಾಕಬಾರದು. ಸಂಕಷ್ಟದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಯಾವುದೇ ಶುಲ್ಕ ಹೆಚ್ಚಳ ಮಾಡಬಾರದು. ಸರ್ಕಾರದ ಸೂಚನೆ ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.