ಬೆಂಗಳೂರು, ಮೇ 2 (Daijiworld News/MSP): ಕೋವಿಡ್ 19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ,ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು. ಆ ಬಳಿಕ ಸಿಎಂ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ರಾಜ್ಯದಲ್ಲೂ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.
ಹೀಗಾಗಿ ಕಂಟೇನ್ ಮೆಂಟ್ ಝೋನ್ ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಜಿಲ್ಲೆಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚನೆ ನೀಡಿದ್ದಾರೆ
ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಅಧಿಕಾರಿಗಳು ತಕ್ಷಣವೇ ಕ್ರಮ ವಹಿಸಲು ಸೂಚನೆ ಕೊಟ್ಟರು.
ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಸೂಚಿಸಿ ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಿದರು.
ಇದಕ್ಕೂ ಮುನ್ನ ರಾಜ್ಯದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಸದಂತೆ ಎಚ್ಚರ ವಹಿಸಲಾಗಿದೆ. ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.
ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು