ಬೆಂಗಳೂರು, ಮೇ 5 (Daijiworld News/MSP): ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ಎರಡನೇ ಅಥವಾ ಮೂರನೇ ವಾರದಲ್ಲಿ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಶೀಘ್ರವೇ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ಸಚಿವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ನಡೆಸಿದ ತಮ್ಮ ಫೇಸ್ ಬುಕ್ ಲೈವ್ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡುವ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ಲಾಕ್ ಡೌನ್ ಹಿನ್ನಲೆಯಲ್ಲಿ ಬಹಳಷ್ಟು ವಿದ್ಯಾರ್ಥಿಗಳು ತಮ್ಮೂರಿಗೆ ತೆರಳಿದ್ದಾರೆ. ಹೀಗಾಗಿ ಅಂತಹ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದ ಶಾಲೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಇಲಾಖೆ ಚಿಂತನೆ ನಡೆಸುತ್ತಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಜೂನ್ ತಿಂಗಳ ಎರಡನೆ ಅಥವಾ ಮೂರನೆ ವಾರದಲ್ಲಿ ಪರೀಕ್ಷೆಯ ನಡೆಸುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದ್ದಾರೆ.
ಮಕ್ಕಳ ಹಿತ ಕಾಪಡಿಕೊಂಡು ಪರೀಕ್ಷೆ ನಡೆಸಲಿದ್ದೇವೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಪ್ರತಿಯೊಬ್ಬರೂ (ವಿದ್ಯಾರ್ಥಿಗಳು ಸೇರಿದಂತೆ) ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಉಷ್ಣಾಂಶ ಪರೀಕ್ಷೆ ಮಾಡಿಸಿಕೊಳ್ಳಬೇಕು, ಹಾಗೂ ಒಂದು ಪರೀಕ್ಷಾ ಕೊಠಡಿಯಲ್ಲಿ ೨೪ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು. ವೇಳಾಪಟ್ಟಿಯನ್ನು ಪರೀಕ್ಷೆಯ ಮೊದಲೇ ಅಂದರೆ 15 ದಿನ ಮುಂಚಿತವಾಗಿಯೇ ಪ್ರಕಟಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಶೇ.99ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ನಾವು ಒಂದು ವರ್ಷ ಪಟ್ಟ ಪರಿಶ್ರಮಕ್ಕೆ ಫಲ ಸಿಗಬೇಕೆಂದರೆ ಪರೀಕ್ಷೆ ಮಾಡಲೇಬೇಕು. ಒಂದು ವೇಳೆ ಹಾಗೆಯೇ ಉತ್ತೀರ್ಣರಾದರೆ ನಮ್ಮನ್ನು ಕೊರೊನಾದಿಂದ ಉತ್ತೀರ್ಣರಾದರು ಎಂದು ಟೀಕೆ ಮಾಡುತ್ತಾರೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ ಎಂದರು.