ನವದೆಹಲಿ, ಮೇ 08 (DaijiworldNews/PY) : ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದ ರೈಲು ದುರಂತಕ್ಕೆ ಪ್ರಧಾನಿ ಮೋದಿ ಅವರು ಬೇಸರ ವ್ಯಕ್ತಪಡಿಸಿದ್ದು, ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರೈಲು ಅಪಘಾತದಲ್ಲಿ ವಲಸೆ ಕಾರ್ಮಿಕರ ಪ್ರಾಣಹಾನಿಯಾಗಿದ್ದು, ತೀವ್ರ ದುಃಖಕರ ಸಂಗತಿಯಾಗಿದೆ. ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಘಟನೆಯ ಬಗ್ಗೆ ಮಾತನಾಡಿದ್ದು, ಅವರು ಸೂಕ್ಷ್ಮವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದು, ಘಟನೆಯ ವಿಚಾರಣೆಗೆ ಆದೇಶ ನೀಡಲಾಗಿದೆ. ಪರಿಹಾರ ಕಾರ್ಯಗಳು ನಡೆಯುತ್ತಿದೆ. ಅಗಲಿದ ಆತ್ಮಗಳಿಗೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಮಹಾರಾಷ್ಟ್ರದ ಔರಂಗಾಬಾದ್ ನಗರದ ರೈಲು ಹಳಿಯಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು 14 ಮಂದಿ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ 5 ಮಂದಿಗೆ ಗಾಯಗಳಾಗಿದ್ದು ಅವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಸೆಂಟ್ರಲ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.