ಬೆಂಗಳೂರು, ಮೇ 25(Daijiworld News/MSP): ಕೊರೊನಾ ವೈರಸ್ ಲಾಕ್ ಡೌನ್ ನಿಂದ ಸುಮಾರು 2 ತಿಂಗಳುಗಳ ಕಾಲ ದೆಹಲಿಯಲ್ಲಿಯೇ ಉಳಿದುಕೊಂಡಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು, ಸೋಮವಾರ ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದುಅವರು ಸ್ವತಃ ಒಂದು ವಾರಗಳ ಕಾಲ ಕ್ವಾರಂಟೈನ್ ಗೆ ಒಳಪಡಲಿದ್ದಾರೆ.
ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ ಪಾತ್ರವಹಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ದೆಹಲಿಯಲ್ಲಿದ್ದುಕೊಂಡೇ ತಮ್ಮ ಕಾರ್ಯ ನಿರ್ವಹಿಸುತ್ತಿದ್ದರು. ಇಂದು 10.30ಕ್ಕೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದುಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಕೊರೊನಾ ವಿರುದ್ದದ ಹೋರಾಟದಲ್ಲಿ ಪಾಲ್ಗೊಳ್ಳುವ ಸಚಿವರು, ಅಧಿಕಾರಿಗಳಿಗೆ ಕ್ವಾರಂಟೈನ್ ನಿಂದ ವಿನಾಯಿತಿ ನೀಡಲಾಗಿದೆ. ಆದರೂ ಕೂಡಾ ಮುನ್ನೆಚ್ಚರಿಕಾ ಕ್ರಮವಾಗಿ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ ಗೆ ಒಳಪಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.