ಬೆಂಗಳೂರು, ಮೇ 26 (DaijiworldNews/PY) : ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣ ಮೇ 26ರಿಂದ ಮೂರು ದಿನಗಳವರೆಗೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಲಿದ್ದು, ಅಲ್ಲಿಯವರೆಗೆ ಮುಂಗಾರು ಮಳೆ ಸುರಿಯಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಯಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಮಂಗಳವಾರ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಹೆಚ್ಚು ಮಳೆಯಾಗಲಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮೇ 27ರಂದು ಭಾರಿ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮೇ 28ರಂದು ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಿದೆ.
ಕಲಬುರ್ಗಿಯಲ್ಲಿ 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಮತ್ತು ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಸೋಮವಾರ ಮಂಡ್ಯ ಜಿಲ್ಲೆಯ ಹೊನಕೆರೆ ಹಾಗೂ ಬರಸಾಳಿನಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೆಳ್ಳೂರು, ಶ್ರವಣಬೆಳಗೊಳ 2 ಸೆಂ.ಮೀ , ಟಿ.ನರಸೀಪುರ, ಸರಗೂರು ಹಾಗೂ ಪಿರಿಯಾಪಟ್ಟಣದಲ್ಲಿ ತಲಾ 1 ಸೆಂ.ಮೀ, ಬೆಂಗಳೂರು ನಗರ, ಕೆ.ಆರ್.ಪೇಟೆ, ಹಾಸನ, ಮಂಡ್ಯ, ಮೈಸೂರು 3 ಸೆಂ.ಮೀ ಮಳೆಯಾಗಿದೆ.