ಬೆಂಗಳೂರು, ಮೇ 26 (Daijiworld News/MSP): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬಹಿರಂಗ ಸಭೆಯಲ್ಲೇ ವೇದಿಕೆ ಮೇಲೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ಜಾಮೀನು ಕೋರಿ ಹೈಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.
ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಕಾರಣ ಆಕೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಕಳುಹಿಸಲಾಗಿತ್ತು. ಇದೀಗ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದ ಅಮೂಲ್ಯ ಲಿಯೋನ್ ಬಳಿಕ ಅದನ್ನು ಹಿಂಪಡೆದುಕೊಂಡಿದ್ದಾರೆ. ಸರ್ಕಾರಿ ಅಭಿಯೋಜಕರು, ಆರೋಪಿ, ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸದೆ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದಕ್ಕೆ ಆಕ್ಷೇಪಿಸಿದ್ದರು.
ಆಗ ಅಮೂಲ್ಯ ಲಿಯೋನ್ ಪರ ವಕೀಲರು ಅರ್ಜಿ ಹಿಂಪಡೆಯಲು ಅನುಮತಿ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದು, ಇದಕ್ಕೆ ಸಮ್ಮತಿಸಿದ ನ್ಯಾಯಪೀಠ, ಸೆಷನ್ಸ್ ನ್ಯಾಯಾಲಯದಲ್ಲಿ ಪರಿಹಾರ ಸಿಗದಿದ್ದರೆ ಆ ಬಳಿಕ ಹೈಕೋರ್ಟ್ ಮೊರೆ ಹೋಗಬಹುದು ಎಂದು ಸೂಚಿಸಿದೆ.