ಬೆಂಗಳೂರು, ಮೇ 26 (Daijiworld News/MSP): ಉತ್ತರ ಪ್ರದೇಶ ಕಾರ್ಮಿಕರು ಅನ್ಯ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಂತಿಲ್ಲ, ಮಾಡಬೇಕಾದರೆ ಯಾವುದೇ ರಾಜ್ಯಗಳು ಸರ್ಕಾರದ ಅನುಮತಿ ಪಡೆಯಬೇಕು ಎಂದು ನಿರ್ದೇಶಿಸುವ ಮೂಲಕ ಈ ದೇಶದ ಒಕ್ಕೂಟ ವ್ಯವಸ್ಥೆ ಹಾಗೂ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ತಕ್ಷಣ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರನ್ನು ಕರೆದೊಯ್ಯಬೇಕಾದ್ದಲ್ಲಿ ಬೇರೆ ಯಾವುದೇ ರಾಜ್ಯಗಳು ಸರ್ಕಾರದ ಅನುಮತಿ ಪಡೆಯಬೇಕು, ವಲಸೆ ಕಾರ್ಮಿಕರು ನಮ್ಮವರು. ಅವರಿಗೆ ಉದ್ಯೋಗ ಒದಗಿಸಿಕೊಡುವಲ್ಲಿ ನಾವು ಬದ್ಧ. ಬೇರೆ ರಾಜ್ಯಕ್ಕೆ ಕರೆದೊಯ್ಯಲಾಗುವ ನಮ್ಮ ರಾಜ್ಯದ ಕಾರ್ಮಿಕರ ಸಾಮಾಜಿಕ ಅಂತರ, ಕಾನೂನು ಕ್ರಮ ಹಾಗೂ ಅವರ ಆರ್ಥಿಕ ಹಕ್ಕುಗಳ ಕುರಿತಾಗಿ ನಾವು ತಿಳಿಯಬೇಕಾಗಿದೆ. ಯಾಕೆಂದರೆ ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಆರಂಭವಾದ ಸಂದರ್ಭದಿಂದ ಸಂಕಷ್ಟದಲ್ಲಿರುವ ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ವಿವಿಧ ರಾಜ್ಯಗಳು ಉತ್ತಮ ರೀತಿಯಲ್ಲಿ ನಡೆಸಿಕೊಂಡಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೇ ಸಿಎಂ ಆದಿತ್ಯನಾಥ್ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಭಾರತದ ಸಂವಿಧಾನದ ಪರಿಚ್ಛೇದ 19(1)(ಡಿ) ಮತ್ತು (ಈ) ಪ್ರಕಾರ ದೇಶದ ಪ್ರತಿಯೊಬ್ಬ ಪ್ರಜೆಯೂ ದೇಶದ ಯಾವುದೇ ಜಾಗದಲ್ಲಿ ಹೋಗಿ, ಅಲ್ಲಿ ವಾಸಿಸಿ, ಅಲ್ಲಿ ಕೆಲಸ ಮಾಡುವ ಹಕ್ಕನ್ನು ನೀಡಲಾಗಿದೆ. ಆದರೆ ಹೊರ ರಾಜ್ಯಗಳಿಂದ ತಮ್ಮ ರಾಜ್ಯಕ್ಕೆ ವಾಪಸ್ಸಾಗುತ್ತಿರುವ ಕಾರ್ಮಿಕರನ್ನು ಸ್ವಾಗತಿಸಿ ಅವರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ವಿಫಲವಾಗಿರುವ ಯೋಗಿ ಆದಿತ್ಯನಾಥ್ ಈ ರೀತಿಯ ಉದ್ಧಟತನದ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಿವಕುಮಾರ್ ಅವರು ಅವರು ಟೀಕಿಸಿದ್ದಾರೆ.