ಬೆಂಗಳೂರು, ಮೇ 28 (Daijiworld News/MB) : ಅಗತ್ಯವಾದ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ಕೊರೊನಾ ಕಾರಣದಿಂದಾಗಿ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬಾರದು. ಪರೀಕ್ಷೆಯನ್ನು ರದ್ದುಮಾಡಬೇಕೆಂದು ಅರ್ಜಿ ಸಲ್ಲಿಸಲಾಗಿದ್ದು ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಲೇವಾರಿ ಮಾಡಿದೆ.
ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಕೀಲರು, ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ರೂಪಿಸಿರುವ ಮಾರ್ಗಸೂಚಿಗಳನ್ನು (ಎಸ್ಓಪಿ) ನ್ಯಾಯಪೀಠಕ್ಕೆ ಸಲ್ಲಿಸಿ, ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್-ಸ್ಯಾನಿಟೈಸರ್, ಆರೋಗ್ಯ ತಪಾಸಣೆ, ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿಗಳ ನಡುವೆ ಅಂತರಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಇನ್ನು ರಾಜ್ಯದಿಂದ ಹೊರಗಿರುವ ಹಾಗೂ ನೆರೆ ರಾಜ್ಯ ಮತ್ತು ಕಂಟೈನ್ಮೆಂಟ್ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗುವಂತಿದ್ದರೆ ಅವರಿಗೆ ಪರೀಕ್ಷೆ ಬರೆಯಬಹುದು. ಇಲ್ಲದಿದ್ದಲ್ಲಿ ಪೂರಕ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಅದನ್ನು ಅವರ ಮೊದಲ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ ಎಂದು ತಿಳಿಸಿದರು.
ಜೂನ್ 25 ರಿಂದ ಜುಲೈ ಜುಲೈ 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.