ಬೆಂಗಳೂರು, ಮೇ 28 (DaijiworldNews/SM): ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಹಿನ್ನೆಲೆಯಲ್ಲಿ ಕೆಲವೊಂದು ರಾಜ್ಯಗಳ ನಡುವಿನ ಸಂಪರ್ಕಕ್ಕೆ ಬ್ರೇಕ್ ಹಾಕಲು ರಾಜ್ಯ ಸರಕಾರ ಮುಂದಾಗಿದೆ. ಮಹಾರಾಷ್ಟ್ರ, ತಮಿಳುನಾಡು ಹಾಗೂ ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಿಂದ ಪ್ರಯಾಣಿಕರಿಗೆ ಗಡಿ ಬಂದ್ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಗುಜರಾತ್, ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ ಹಾಗೂ ರಾಜಸ್ತಾನದಿಂದ ರಾಜ್ಯಕ್ಕೆ ಬರುವ ಅವಕಾಶ ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕ ವಿಮಾನಗಳನ್ನು ಸಧ್ಯಕ್ಕೆ ನಿಷೇಧಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಈ ರಾಜ್ಯಗಳ ಭೂ ಮಾರ್ಗದ ಗಡಿಗಳನ್ನು ಈಗಾಗಲೇ ಬಂದ್ ಮಾಡಿದ್ದು, ಈ ಆದೇಶವನ್ನು ಇನ್ನೂ 15 ದಿನಗಳ ಕಾಲ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.