ಬೆಂಗಳೂರು, ಮೇ 31 (Daijiworld News/MB) : ಶುಕ್ರವಾರ ರಾತ್ರಿ ಮತ್ತು ಶನಿವಾರಬ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ''ಯೆಲ್ಲೊ ಅಲರ್ಟ್'' ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 31 ಮತ್ತು ಜೂನ್ 1ರಂದು ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗಜಿಲ್ಲೆಗಳಲ್ಲಿ ಜೂ.1ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಶನಿವಾರ ಸಂಜೆ ಬಾದಾಮಿಯಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಸಾವನ್ನಪ್ಪಿದ್ದು ಜೊತೆಯಲ್ಲೇ ಇದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನ ಒಂದು ಮನೆ ಕುಸಿದಿದ್ದು ತಗ್ಗು ಪ್ರದೇಶಗಳ 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ರಾತ್ರಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ.