ಬೆಂಗಳೂರು, ಜೂ 01 (DaijiworldNews/PY) : ನಾನೀಗ ಕೊರೊನಾ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅತೃಪ್ತರ ಸಭೆ ಹಾಗೂ ನಾಯಕತ್ವವನ್ನು ಪ್ರಶ್ನಿಸಿದ ಬಗ್ಗೆ ಸಿಎಂ ಬಿಎಸ್ವೈ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ರಾಜ್ಯದಲ್ಲಿ ಕೊರೊನಾ ಪೀಡಿತರಿಗೆ ಯಾವುದೇ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಣೆ ಮಾಡುವಂತಿಲ್ಲ. ಯಾವುದೇ ತುರ್ತು ಸಂದರ್ಭ ಎದುರಾದರೂ ಚಿಕಿತ್ಸೆ ನೀಡಬೇಕು. ಈ ಬಗ್ಗೆ ದೂರುಗಳು ಬಂದಿವೆ. ಈ ವಿಚಾರದ ಬಗ್ಗೆ ಗಮನಹರಿಸುತ್ತೇನೆ ಎಂದು ತಿಳಿಸಿದರು.
ಆಸ್ಪತ್ರೆಗಳಲ್ಲಿ ಮಹಾರಾಷ್ಟ್ರದಿಂದ ಬಂದವರಿಗೆ ಕ್ವಾರಂಟೈನ್ ಮಾಡುತ್ತಿದ್ದೇವೆ. ಉಳಿದ ರಾಜ್ಯಗಳಿಂದ ಬಂದವರಿಗೆ ಹೋಂಕ್ವಾರಂಟೈನ್ಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ಕೊರೊನಾ ನಿರ್ವಹಣೆಗೆ ಸಂಬಂಧಪಟ್ಟಂತೆ ವೈದ್ಯಕೀಯ ಉಪಕರಣಗಳ ಕೊರತೆ ಇಲ್ಲ. ರಾಜ್ಯದಲ್ಲಿ ಪರಿಸ್ಥಿತಿ ನಿಭಾಯಿಸಲು ಅಗತ್ಯವಿರಿವಷ್ಟು ಪಿಪಿಇ ಕಿಟ್ಗಳು ಸೇರಿದಂತೆ ಎಲ್ಲಾ ಬಗೆಯ ಉಪಕರಣಗಳಿವೆ ಎಂದರು.
ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಅಲ್ಲವೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಕ್ಕೆ ಹಲವು ಸಂದರ್ಭಗಳಲ್ಲಿ ಅನುದಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚು ಹಣ ಬಿಡುಗಡೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.