ಬೆಂಗಳೂರು, ಜೂ 04 (DaijiworldNews/PY) : ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಸುಮಾರು ಮೂರು ಸಾವಿರಕ್ಕೂ ಅಧಿಕ ಹೋಂ ಗಾರ್ಡ್ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
ಗೃಹ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಹೋಂಗಾರ್ಡ್ಗಳ ಸೇವೆ ಒದಗಿಸಲು ಕ್ರಮವಹಿಸುವಂತೆ ಸೂಚಿಸಿದ್ದು, ಪೊಲೀಸ್ ಸಿಬ್ಬಂದಿ ಕೊರೊನಾ ನಿಯಂತ್ರಣದ ಸಮಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಬಗ್ಗೆ ಶ್ಲಾಘಿಸಿ, ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶದಲ್ಲಿ ಸಿಇಎಲ್ ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆ ಅವರು ಸೂಚನೆ ನೀಡಿದ್ದು, ಅಲ್ಲದೇ, ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫೊರೆನಿಕ್ಸ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮಕೈಗೊಳ್ಳಲಾಗುವುದು. ವಾಹನ ಖರೀದಿಗೆ ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಆರಂಭವಾಗಿದೆ. ಇಲ್ಲಿಯೂ ಕೂಡಾ ಹೋಂಗಾರ್ಡ್ಗಳನ್ನು ತರಬೇತಿ ನೀಡಿ ನಿಯೋಜಿಸಬಹುದು. ಅವರನ್ನು ಕೆಲವು ದಿನಗಳಲ್ಲಿ ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಕೊರೊನಾ ಸಂದರ್ಭ ಕಾರಾಗೃಹಗಳಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಪರಾಧ ಪ್ರಕರಣಗಳು ವರದಿಯಾಗಿಲ್ಲ. 5005 ಮಂದಿಯನ್ನು ಸುಪ್ರೀಂಕೋರ್ಟಿನ ನಿರ್ದೇಶನದನ್ವಯ ಜಾಮೀನಿನ ಮೇಲೆ ಹಾಗೂ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆಯನ್ನು ಶೇ. 110 ರಿಂದ ಶೇ. 95 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.
ಬಳಿಕ್ ಗೃಹ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಇಲಾಖೆಯ ವಿವಿಧ ಮೂಲ ಸೌಕರ್ಯ ಅಭಿವೃದ್ದಿಗೆ ಸಂಬಂಧಪಟ್ಟಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಸಿಎಂ ಬಿಎಸ್ವೈ ಅವರು ಸೂಚಿಸಿದರು.
ಬೃಹತ್ ಮೊತ್ತದ ಅನುದಾನವನ್ನು ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗ ಆಗದಂತೆ ಕಟ್ಟುನಿಟ್ಟಾ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದು, ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ದ ಕಠಿಣ ಶಿಸ್ತು ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.