ಕಲಬುರಗಿ, ಜೂ 05 (Daijiworld News/MSP): ಜೂನ್ ಮತ್ತು ಜುಲೈ-2020ರ ಮಾಹೆಯಲ್ಲಿ ರಾಜ್ಯದ 5200 ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯವಾಗಲಿದೆ. ಕೊರೋನಾ ಸಾಂಕ್ರಾಮಿಕ ಸೊಂಕು ಹಿನ್ನೆಲೆಯಲ್ಲಿ ಚುನಾವಣೆ ಮುಂದಕ್ಕೆ ಹೋಗಲಿದ್ದು, ಈ ಸಂದರ್ಭದಲ್ಲಿ ಪ್ರಸ್ತುತ ಇರುವ ಅವಧಿಯನ್ನು ವಿಸ್ತರಿಸಬೇಕೆ, ಆಡಳಿತಾಧಿಕಾರಿಗಳನ್ನು ನೇಮಿಸಬೇಕೆ ಅಥವಾ ಆಡಳಿತ ಸಮಿತಿ ರಚಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಶುಕ್ರವಾರ ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ರೈತರ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಅವಧಿ ಮುಕ್ತಾಯವಾಗಲಿರುವ 5200 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗವು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಅಭಿಪ್ರಾಯ ಪಡೆದಿದ್ದು, ಪ್ರಸ್ತುತ ಕೊರೋನಾ ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿ-ಸಿಬ್ಬಂದಿಗಳು ಇದರಲ್ಲಿ ತೊಡಗಿದ್ದು, ಚುನಾವಣೆ ಮುಂದೂಡವುದು ಸೂಕ್ತವೆಂದು ಬಹುತೇಕ ಜಿಲ್ಲಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದರು.