ಬೆಂಗಳೂರು, ಜೂ 06 (DaijiworldNews/PY) : ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 14ರಂದು ಪದಗ್ರಹಣ ಮಾಡುವುದು ಬಹುತೇಕ ಖಚಿತವಾಗಿದೆ.
ಈ ಹಿಂದೆ ಮೂರು ಬಾರಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣಕ್ಕೆ ಮುಹೂರ್ತ ನಿಗದಿಪಡಿಸಲಾಗಿತ್ತು. ಮೊದಲು ಎಪ್ರಿಲ್ ಎರಡನೇ ವಾರದಲ್ಲಿ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ನಿರ್ಧಾರ ಮಾಡಲಾಗಿತ್ತು. ನಂತರ ಮೇ 31ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ನಡೆದಿತ್ತು. ಆದರೆ, ಲಾಕ್ಡೌನ್ ವಿಸ್ತರಣೆ ಆದ ಕಾರಣ ಜೂನ್ 7ಕ್ಕೆ ನಿಗದಿಪಡಿಸಲಾಗಿತ್ತು. ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಯಾವುದೇ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇಲ್ಲದೇ ಇದ್ದ ಕಾರಣ ಅಂದೂ ಕೂಡಾ ಅಧಿಕಾರ ಸ್ವೀಕಾರ ಮಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಸಾಧ್ಯವಾಗಲಿಲ್ಲ.
ನಿರ್ಗಮಿತ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಪಕ್ಷ ಧ್ವಜ ಪಡೆದುಕೊಂಡು, ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಶಿವಕುಮಾರ್ ಅಧ್ಯಕ್ಷ ಸ್ಥಾನವನ್ನು ಅಧಿಕೃತವಾಗಿ ಅಲಂಕರಿಸಲಿದ್ದಾರೆ. ಅಂದು ಈ ಕಾರ್ಯಕ್ರಮವನ್ನು ಅಭಿಮಾನಿಗಳು ರಾಜ್ಯಾದ್ಯಂತ ವೀಕ್ಷಣೆ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂಬುದಾಗಿ ಪಕ್ಷದ ಮೂಲಗಳು ಹೇಳಿವೆ.
ಪಕ್ಷದ ಕಚೇರಿಯಲ್ಲಿ ಸರಳವಾದ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಉದ್ದೇಶಿಸಲಾಗಿದ್ದು, ರಾಜ್ಯ ಸರ್ಕಾರಕ್ಕೆ ಈ ಸಂಬಂಧ ಅನುಮತಿಗಾಗಿ ಪತ್ರ ಬರೆಯಲಾಗಿದೆ ಎಂದು ಕಾಂಗ್ರೆಸ್ ಮೂಲಗಳಿ ತಿಳಿಸಿವೆ. ಆದರೆ, ಜೂನ್ 8ರ ಬಳಿಕ ಅನುಮತಿ ನೀಡುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ತಿಳಿದುಬಂದಿದೆ.
ಈ ನಡುವೆ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ವಿಚಾರದಲ್ಲೂ ಬಿಜೆಪಿ ರಾಜಕೀಯ ನಡೆಸುತ್ತಿದೆ ಎಂದು ಹೇಳಿದ್ದರು. ಇದೀಗ ಪದಗ್ರಹಣಕ್ಕೆ ಮತ್ತೊಂದು ದಿನವನ್ನು ಪಕ್ಷ ನಿಗದಿಪಡಿಸಿದೆ.