ಮೈಸೂರು, ಜೂ 06 (DaijiworldNews/PY) : ರಾಜ್ಯದಲ್ಲಿನ ಮೃಗಾಲಯ, ಜೈವಿಕ ಉದ್ಯಾನ, ಪಕ್ಷಿಧಾಮ ಹಾಗೂ ರಾಷ್ಟ್ರೀಯ ಉದ್ಯಾನಗಳನ್ನು ಜೂನ್ 8ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುತ್ತಿದೆ. ರಾಜ್ಯ ಸರ್ಕಾರ ಈ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮೈಸೂರು ಮೃಗಾಲಯದಲ್ಲಿ ಪ್ರವಾಸಿಗರ ಸ್ವಾಗತಕ್ಕೆ ಸಿದ್ಧತೆ ನಡೆದಿದ್ದು, ನಾಗರಹೊಳೆ ಹಾಗೂ ಬಂಡೀಪುರ ರಾಷ್ಟ್ರೀಯ ಉದ್ಯಾನಗಳಲ್ಲಿ ಸಫಾರಿಗೂ ಅವಕಾಶ ಸಿಗಲಿದೆ.
ಮಾರ್ಗಸೂಚಿ ಪಾಲನೆ ಮಾಡುತ್ತಿದ್ದಾರೆಯೇ ಎನ್ನುವುದನ್ನು ಪರಿಶೀಲನೆ ಮಾಡಲು ನೋಡಲ್ ಅಧಿಕಾರಿಯನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಪ್ರವೇಶ ದ್ವಾರದಲ್ಲೇ ಥರ್ಮರ್ಲ್ ಸ್ಕ್ರೀನಿಂಗ್ ಮಾಡಿಸಬೇಕು. ಇದರೊಂದಿಗೆ ಸಾಬೂನು ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನೂ ಮಾಡಬೇಕು. ದಟ್ಟಣೆ ತಪ್ಪಿಸುವ ಸಲುವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ನಿಗಾ ಇಡಬೇಕು.
ಸದಾ ಪ್ರವಾಸಿಗರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಸ್ಕ್ ಧರಿಸಿರುವುದು ಕಡ್ಡಾಯ. ಸದಾ 1 ಮೀಟರ್ ಅಂತರ ಕಾಯ್ದುಕೊಳ್ಳುವ ಸಲುವಾಗಿ ಸಫಾರಿ ವಾಹನಗಳಲ್ಲಿ ಶೇ 50ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸುವಂತಿಲ್ಲ. ಪ್ರತಿ ದಿನ ವಾಹನಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪ್ರಾಣಿಗಳಿಂದಲೂ 1 ಮೀಟರ್ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದೆ.
ರಾಜ್ಯದ ಎಲ್ಲಾ ಮೃಗಾಲಯಗಳನ್ನು ಸೋಮವಾರದಿಂದಲೇ ತೆರೆಯಲಾಗುವುದು. ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ತಿಳಿಸಿದರು