ಬೆಂಗಳೂರು, ಜೂ 08 (Daijiworld News/MSP): ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿ ಘೋಷಿಸಿದ್ದು, ಇನ್ನು ಕಾಂಗ್ರೆಸ್ನಿಂದ ಎರಡನೇ ಅಭ್ಯರ್ಥಿಯನ್ನು ಘೋಷಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಸಿದ್ದರಾಮಯ್ಯ ಅವರು, ಎಲ್ಲಾ ಶಾಸಕರು, ಎಂಎಲ್ಸಿಗಳು ಸಭೆಗೆ ಬಂದಿದ್ದರು. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಅಧ್ಯಕ್ಷ ಡಿ.ಕೆ ಶಿವಕುಮಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 'ಬಿ' ಫಾರಂ ನೀಡಿದರು. ಜೆಡಿಎಸ್ ಅಭ್ಯರ್ಥಿಗೆ ಬೆಂಬಲಿಸುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಅವರು, ಈ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಜೂ.19ರಂದು ರಾಜ್ಯದಿಂದ ಖಾಲಿಯಾಗುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಇನ್ನಷ್ಟೇ ಅಬ್ಯರ್ಥಿಯನ್ನು ಘೋಷಿಸಬೇಕಾಗಿದೆ.