ಬೆಂಗಳೂರು, ಜೂ.08 (DaijiworldNews/MB) : ಜೂನ್ 16 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಒಪ್ಪಿಗೆ ಸೂಚಿಸಿದ್ದು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಈ ಬಗ್ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ದೇವೇಗೌಡರು ಸ್ಪರ್ಧಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದರೂ ಕೂಡಾ ದೇವೇಗೌಡರು ಸ್ಪರ್ಧೆಗೆ ಹಿಂದೇಟು ಹಾಕಿದ್ದರು. ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿಯ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ನಿಂದ ಎಚ್ಡಿ ದೇವೇಗೌಡರು ಸ್ಪರ್ಧೆ ಖಚಿತವಾಗಿದ್ದು ಬಿಜೆಪಿ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ.