ಶ್ರೀನಗರ, ಜೂ.13 (DaijiworldNews/MB) : ಜಮ್ಮು ಕಾಶ್ಮೀರದಲ್ಲಿ ಭಾರತೀಯ ಭದ್ರತಾಪಡೆ ಹಾಗೂ ಕಾಶ್ಮೀರ ವಲಯ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು ಜಮ್ಮು–ಕಾಶ್ಮೀರದ ಕುಲ್ಗಾಂ ಜಿಲ್ಲೆಯ ನಿಪೊರಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಮತ್ತು ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಆರಂಭ ಮಾಡಿದ್ದು ಈ ಸಂದರ್ಭದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಪರಸ್ಪರ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಭದ್ರತಾ ಪಡೆಯು ಈ ವರ್ಷ ಜನವರಿಯಿಂದ ಜೂನ್ 10ರವರೆಗೆ ಜಮ್ಮು-ಕಾಶ್ಮೀರದಲ್ಲಿ ಲಷ್ಕರ್-ಎ-ತೊಯ್ಬಾ, ಜೈಷ್-ಎ-ಮೊಹಮ್ಮದ್, ಹಿಜ್ಬುಲ್ ಮುಜಾಹಿದೀನ್ ಸೇರಿದಂತೆ ಹಲವು ಸಂಘಟನೆಗಳ ಉಗ್ರರು ಸೇರಿದಂತೆ ಸುಮಾರು 100 ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ಸೇನೆಯು ಮಾಹಿತಿ ನೀಡಿದೆ.
ಇನ್ನು ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೇರಲಾಗಿದ್ದ ಲಾಕ್ಡೌನ್ ಸಂದರ್ಭದಲ್ಲಿ ಏಪ್ರಿಲ್ 1ರಿಂದ ಜೂನ್ 10ರ ನಡುವೆ 68 ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದು ಈ ಪೈಕಿ ಪಾಕಿಸ್ತಾನ ಮೂಲದ ಉಗ್ರರು ಕೂಡಾ ಸೇರಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.