ನವದೆಹಲಿ, ಜೂ.14 (DaijiworldNews/MB) : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು ಶನಿವಾರವೂ ಸುಮಾರು ಎರಡು ಸಾವಿರ ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ದೆಹಲಿ ಸರ್ಕಾರ ಸೋಂಕಿತರಾಗಿ 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕಾರ್ಯದರ್ಶಿ ವಿಕಾಸ್ ಸೇತಿ, 10 ಸಾವಿರ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಯನ್ನು ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್ನಲ್ಲಿ ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು ಜೂನ್ ಅಂತ್ಯಕ್ಕೆ ನಿರ್ಮಾಣ ಕಾರ್ಯ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರು, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಲ್ಲದೆ, ಉತ್ತರ, ಪೂರ್ವ ಮತ್ತು ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ಗಳ ಮೇಯರ್ ಗಳು ಮತ್ತು ಆಯುಕ್ತರು, ಅಧಿಕಾರಿಗಳು ಭಾನುವಾರ ಸಂಜೆ 6 ಗಂಟೆಗೆ ಸಂವಾದ ನಡೆಸಲಿದ್ದಾರೆ.