ಬೆಂಗಳೂರು, ಜೂ 15 (Daijiworld News/MSP): ರಾಜ್ಯದಲ್ಲಿ ಲಾಕ್ ಡೌನ್ ತೆರವಾದ ಬಳಿಕ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ವೈರಸ್ ನಿಯಂತ್ರಣಕ್ಕೆ ತರಲೆಂದು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕೊರೊನಾ ನಿಯಂತ್ರಣದ ಕುರಿತು ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಸುಮಾರು 8,000 ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ಗಳನ್ನು ರಚನೆ ಮಾಡಿ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಪತ್ತೆ ಹಚ್ಚಲಾಗುವುದು. ಅಲ್ಲದೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು, ಹೋಂ ಕ್ವಾರಂಟೈನ್ ಪಾಲನೆಯನ್ನು ಖಾತರಿ ಪಡಿಸುವ ಬಗ್ಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳು ಇದ್ದು, 93 ಶೇಕಡಾ ಜನರಿಗೆ ರೋಗ ಲಕ್ಷಣ ಇಲ್ಲ. 200 ಜನರಿಗೆ ಮಾತ್ರ ರೋಗ ಲಕ್ಷಣ ಇದೆ. ಹೀಗಾಗಿ ಪರೀಕ್ಷಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ಈವರೆಗೆ 10 ಲಕ್ಷ ಜನಸಂಖ್ಯೆಗೆ 7,100 ಪರೀಕ್ಷೆ ನಡೇಸಲಾಗಿದ್ದು ಐಸಿಎಂಆರ್ ಮಾರ್ಗಸೂಚಿಗಳಿಗಿಂತ ಹೆಚ್ಚು ಪರೀಕ್ಷೆ ನಡೆಸಲಾಗಿದೆ. ಗುರುವಾರ ಮಾಸ್ಕ್ ಡೇ ಆಚರಿಸಲಾಗುವುದು. ವಿಧಾನಸೌಧದಿಂದ ಬೆಳಿಗ್ಗೆ 8.30 ಗಂಟೆಗೆ ಮಾಸ್ಕ್ ಧರಿಸಿ 1 ಕಿ.ಮೀ. ವಾಕ್ ಮಾಡಲಾಗುವುದು. ಅಲ್ಲದೆ, ರಾಜ್ಯಾದ್ಯಂತ, ಪಂಚಾಯತ್ ಮಟ್ಟದಲ್ಲಿಯೂ ಇದನ್ನು ಆಚರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.