ನವದೆಹಲಿ, ಜೂ.17 (DaijiworldNews/MB) : ಚೀನಾ - ಭಾರತ ಗಡಿ ಸಂಘರ್ಷದಲ್ಲಿ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ಸೇನೆಗೆ ಹಾನಿ ಉಂಟಾಗಿದ್ದು ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದ್ದು ಏತನ್ಮಧ್ಯೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ವರದಿಯಾಗಿದೆ.
ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸೋಮವಾರ ರಾತ್ರಿ ಸಂಘರ್ಷ ಉಂಟಾಗಿದ್ದು ಮೂವರು ಯೋಧರು ಹುತಾತ್ಮರಾಗಿ, 17 ಸೈನಿಕರು ಗಂಭೀರ ಗಾಯಗೊಂಡಿದ್ದರು. ಆದರೆ ಗಾಯಗೊಂಡ ಸೈನಿಕರು ಕೂಡಾ ಸಾವನ್ನಪ್ಪಿದ್ದು ಒಟ್ಟು 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.
ಈ ಮೊದಲು ಉಭಯ ರಾಷ್ಟ್ರಗಳ ಘರ್ಷನೆಯಿಂದ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿತ್ತು. ಈ ಸಂದರ್ಭದಲ್ಲಿ ಚೀನಾದ 100ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.