ಬೆಂಗಳೂರು, ಜೂ 18 (Daijiworld News/MSP): ಕೊರೊನಾ ಲಾಕ್'ಡೌನ್ ನಿಂದ ಮುಂದೂಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಭಾಷಾ ಪರೀಕ್ಷೆ ಗುರುವಾರ ರಾಜ್ಯದಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಕೊರೊನಾ ಸಾಂಕ್ರಮಿಕ ರೋಗ ನಿಯಂತ್ರಿಸಲು ಮಾರ್ಚ್ 24ರಿಂದ ದಿಢೀರಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯ ಒಂದು ಪರೀಕ್ಷೆ ಸೇರಿದಂತೆ ಎಲ್ಲ ಶಾಲಾ-ಕಾಲೇಜುಗಳ ಪರೀಕ್ಷೆಗಳೂ ಮುಂದೂಡಲ್ಪಟ್ಟಿದ್ದವು.
ರಾಜ್ಯಾದ್ಯಂತ ಆಂಗ್ಲಭಾಷಾ ಪರೀಕ್ಷೆಗೆ ಒಟ್ಟು 5,95,997 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಉಚಿತ ಸಾರಿಗೆ ವ್ಯವಸ್ಥೆ ಮಾಡಿದೆ. ಬೆಳಗ್ಗೆ 10.30ರಿಂದ ಪರೀಕ್ಷೆ ಆರಂಭವಾಗಲಿದೆ.
ಪರೀಕ್ಷೆ ಸಮಯಕ್ಕೂ ಮುಂಚಿತವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವುದರಿಂದ ಬೇಗ ಬರುವಂತೆ ಸೂಚನೆ ನೀಡಲಾಗಿದೆ. ಇಂದು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.