ಬೆಂಗಳೂರು, ಜೂ 19 (DaijiworldNews/SM): ಕೊರೋನಾ ಸಂಕಷ್ಟದಿಂದಾಗಿ ರಾಜ್ಯದಲ್ಲಿ ಕೆಲವೊಂದು ಕಾರ್ಯಗಳು ಸ್ಥಗಿತಗೊಂಡಿವೆ. ಈ ನಡುವೆ ತಮಿಳುನಾಡು, ತೆಲಂಗಾಣ ರಾಜ್ಯಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ರದ್ದುಗೊಳಿಸಿವೆ. ಆದರೆ, ರಾಜ್ಯದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಸಚಿವರು ಆದೇಶ ನೀಡಿದ್ದಾರೆ. ಇದೀಗ ಇದರ ವಿರುದ್ದ ಶಿಕ್ಷಣ ಸಚಿವರ ಮೇಲೆ ದೂರು ದಾಖಲಿಸಲಾಗಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ನಿಯಂತ್ರಣದಲ್ಲಿದ್ದ ಕೊರೊನಾ ಸೋಂಕು ಇದೀಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದಿರುವ ಜನಾಧಿಕಾರ ಸಂಘರ್ಷ ಪರಿಷತ್ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ ಸಂಕಷ್ಟದ ಸಮಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸುವುದು ಸರಿಯಲ್ಲ ಎಂದಿರುವ ಸಮಿತಿ ಸಚಿವರ ವಿರುದ್ಧ ದೂರು ದಾಖಲಿಸಿಕೊಂಡಿದೆ.