ಬೆಂಗಳೂರು, ಜೂ 20 (Daijiworld News/MSP): ಅನುದಾನದ ತಾರತಮ್ಯ ಹೆಸರಲ್ಲಿ ಒಂದಷ್ಟು ಶಾಸಕರು ಸಿಎಂ ಯಡಿಯೂರಪ್ಪನವರ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಳಿ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ .ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಅನುದಾನ ನೀಡುತ್ತಿಲ್ಲ. ರಾಜ್ಯಾಧ್ಯಕ್ಷರಾದ ತಾವು ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಅನುದಾನ ಬಿಡುಗಡೆ ಮಾಡಲು ಒತ್ತಡ ಹಾಕುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಟೀಲ್ ಬಳಿ ದೂರು ಸಲ್ಲಿಸಿದ ನಿಯೋಗದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ್ ಬೆಲ್ಲದ, ಅಭಯ್ ಪಾಟೀಲ್, ಅನಿಲ್ ಬೆನಕೆ, ಮೊದಲಾದವರು ಎಂದು ತಿಳಿದುಬಂದಿದೆ.
ತಮ್ಮ ಕ್ಷೇತ್ರಗಳಿಗೆ ಅನುದಾನವೇ ಸಿಗುತ್ತಿಲ್ಲ. ಅನುದಾನದಲ್ಲೂ ತಾರತಮ್ಯ ಮಾಡಲಾಗುತ್ತಿದೆ. ಪಕ್ಷದಲ್ಲಿ ಮುಖ ನೋಡಿ ಅನುದಾನ ಕೊಡುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾದರೂ ಹೇಗೆ ಎಂದು ಶಾಸಕರು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.
ಸ್ವಪಕ್ಷ ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಈ ಕುರಿತು ಶೀಘ್ರದಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.