ಬೆಂಗಳೂರು, ಜೂ 23 (Daijiworld News/MSP): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿರುವ ಕಾರಣ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ , ಬೆಂಗಳೂರು ಬ್ರೆಜಿಲ್ ಆಗೋ ಮೊದಲು ಎಚ್ಚೆತ್ತುಕೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು "ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ.
ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.
ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಹೇಳಿದ್ದಾರೆ.
ಈ ನಡುವೆ ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವಂತೆ ಮತ್ತೆ ಲಾಕ್ ಡೌನ್ ಹಾಗೂ ಸೀಲ್ ಡೌನ್ ಗೆ ಕೂಗು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಸರ್ಕಾರದ ಮಟ್ಟದಲ್ಲೂ ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗಿದೆ.