ಬೆಂಗಳೂರು, ಜೂ 23(DaijiworldNews/PY) : ಗುರುವಾರದಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಗುರುವಾರದಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದಿದ್ದಾರೆ.
ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಹೇಳಿದ್ದಾರೆ.
ಕರೋನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ತಿಳಿಸಿದ್ದಾರೆ.
ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.