ಪಟ್ನಾ, ಜೂ. 26 (DaijiworldNews/MB) : ಬಿಹಾರದಲ್ಲಿ ಸಿಡಿಲಿನಿಂದಾಗಿ ಒಂದೇ ದಿನದಲ್ಲಿ 83 ಜನರು ಸಾವನ್ನಪ್ಪಿದ್ದು ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಬಿಹಾರ ಮತ್ತು ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಮಿಂಚು ಬಡಿದು ಅನೇಕ ಜನರು ಸಾವನ್ನಪ್ಪಿದ ದುರಂತ ಸುದ್ದಿ ಬಂದಿದೆ. ರಾಜ್ಯ ಸರ್ಕಾರಗಳು ತುರ್ತಾಗಿ ಪರಿಹಾರ ಕಾರ್ಯಗಳಲ್ಲಿ ತೊಡಗಿವೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಭಾರೀ ಮಳೆ ಮತ್ತು ಮಿಂಚಿನಿಂದಾಗಿ ಉತ್ತರ ಪ್ರದೇಶ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಪ್ರಾಣಹಾನಿ ಸಂಭವಿಸಿದ ಬಗ್ಗೆ ತಿಳಿದು ಬೇಸರವಾಯಿತು. ಆಡಳಿತವು ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, "ಬಿಹಾರದಲ್ಲಿ ಮಿಂಚಿನಿಂದ 83 ಜನರು ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ಆಘಾತವಾಗಿದೆ. ಮೃತರ ಪ್ರೀತಿಪಾತ್ರರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ. ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಕಾಂಗ್ರೆಸ್ ಕಾರ್ಯಕರ್ತರಲ್ಲಿ ನನ್ನ ಮನವಿ" ಎಂದು ಕೇಳಿಕೊಂಡಿದ್ದಾರೆ.
ಬಿಹಾರದಲ್ಲಿ ಭಾರೀ ಮಳೆ, ಸಿಡಿಲು, ಮಳೆಯಿಂದಾಗಿ 83 ಜನರು ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಬಿಹಾರದಲ್ಲಿ ಒಂದೇ ದಿನ ಸಿಡಿಲಿನಿಂದ 83 ಮಂದಿ ಮೃತ್ಯು - ಸಂತಾಪ ಸೂಚಿಸಿದ ಗಣ್ಯರು