ಬೆಂಗಳೂರು, ಜೂ 30 (Daijiworld News/MSP): ರಾಜ್ಯದಲ್ಲಿ ಕೊರೊನಾ ಸೋಂಕು ಆತಂಕಕಾರಿ ಮಟ್ಟದಲ್ಲಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಸರ್ಕಾರ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಎಸೆಸೆಲ್ಸಿ ಪರೀಕ್ಷೆ ಮುಕ್ತಾಯದ ಬಳಿಕ ಕೊರೊನಾ ಸೋಂಕು ಹರಡುವಿಕೆಗೆ ಸರ್ವರೀತಿಯಲ್ಲೂ ತಡೆ ಒಡ್ಡುವ ಪ್ರಯತ್ನ ಮಾಡಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಜುಲೈ ಮತ್ತು ಆಗಸ್ಟ್ ನಲ್ಲಿ ಕೊರೊನಾ ಹೆಚ್ಚಳವಾಗಬಹುದು ಎಂದು ತಜ್ಞರು ವರದಿ ನೀಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟುಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಆಗ ಮಾತ್ರ ಕೊರೊನಾ ತಡೆ ಸಾಧ್ಯವಾಗುತ್ತದೆ. ಸದ್ಯ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈಗಲೇ ಕಠಿಣ ಕ್ರಮಕ್ಕೆ ಮುಂದಾದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಡ್ಡಿಯಾಗುತ್ತದೆ. ಹೀಗಾಗಿ ಎಸೆಸೆಲ್ಸಿ ಪರೀಕ್ಷೆ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಅಶೋಕ್ ಪುನರುಚ್ಚರಿಸಿದ್ದಾರೆ.
ಅಲ್ಲದೇ, ರಾಜ್ಯದಲ್ಲಿ ಲಾಕ್ ಡೌನ್ ಕುರಿತು ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಜುಲೈ ೫ ರ ಬಳಿಕ ಹನ್ನೆರಡು ಅಥವಾ ಹದಿನೈದು ದಿನಗಳ ಲಾಕ್ ಡೌನ್ ಜಾರಿಯಾಗಬಹುದು ಎಂದು ಅವರು ತಿಳಿಸಿದರು.