ಬೆಂಗಳೂರು, ಜು. 03 (DaijiworldNews/MB) : ಅಕ್ಟೋಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್ ಗೆ ತಿಳಿಸಿದೆ.
ಚುನಾವಣಾ ಅವಧಿ ಮುಗಿದರೂ ಕೂಡಾ ಗ್ರಾಮ ಪಂಚಾಯತ್ ಚುನಾವಣೆ ನಡೆಸುತ್ತಿಲ್ಲ ಎಂದು ದೂರಿ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆಯನ್ನು ಪ್ರಶ್ನಿಸಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ರಾಜ್ಯ ಸರ್ಕಾರ ಮೀಸಲಾತಿ ಅವಧಿಯನ್ನು 10 ವರ್ಷಕ್ಕೆ ಹೆಚ್ಚಳ ಮಾಡಿ ಹೊರಡಿಸಿರುವ ಸುಗ್ರೀವಾಜ್ಞೆ ಪ್ರಕಾರವಾಗಿ ಮೀಸಲಾತಿ ಮರು ನಿಗದಿಪಡಿಸಬೇಕಾಗಿದ್ದು ಇದನ್ನು ಜುಲೈ 25ರೊಳಗೆ ಪೂರ್ಣಗೊಳಿಸಲಾಗುವುದು. ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗುವುದು. ಸೆಪ್ಟೆಂಬರ್ 10ರೊಳಗೆ ಮತದಾರರ ಪಟ್ಟಿ ಅಂತಿಮಗೊಳ್ಳಲಿದ್ದು ಚುನಾವಣೆ ಘೋಷಿಸುವ ಬಗ್ಗೆ ಅಕ್ಟೋಬರ್ ಮೊದಲ ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.