ಬೆಂಗಳೂರು, ಜು 10 (Daijiworld News/MSP): ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಅಲ್ಲದೆ ಈ ಅಕ್ಟೋಬರ್ 01 ರಿಂದ ಕಾಲೇಜು ತೆರೆಯಲಿದ್ದು ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ತಿಳಿಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ನ ಪದವಿ , ಡಿಪ್ಲೋಮಾ ಹಾಗೂ ಇಂಜಿನಿಯರಿಂಗ್ ನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಈ ನಿರ್ಧಾರ 2019-20ನೇ ಅಂದರೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಕಾಲೇಜು ಮತ್ತು ವಿಶ್ವವಿದ್ಯಾಲಯದ ಮಟ್ಟದಲ್ಲಿ ಸೆಪ್ಟೆಂಬರ್ ಮೊದಲ ತಿಂಗಳಿನಿಂದ ಆನ್ಲೈನ್ ತರಗತಿಗಳು ನಡೆಯಲಿವೆ . ರೆಗ್ಯುಲರ್ ತರಗತಿ ಅಕ್ಟೋಬರ್ 01 ರಿಂದ ಆರಂಭವಾಗಲಿದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.