ಬೆಂಗಳೂರು, ಜು 11(DaijiworldNews/SM): ಮಂಗಳವಾರ ರಾತ್ರಿಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶವನ್ನು ಲಾಕ್ ಡೌನ್ ಮಾಡಿ ಸರಕಾರ ಆದೇಶ ನೀಡಿದೆ.
ಮಂಗಳವಾರ ರಾತ್ರಿಯಿಂದ ಒಂದುವಾರಗಳ ಕಾಲ ಬೆಂಗಳೂರು ಲಾಕ್ ಡೌನ್ ಆಗಿರಲಿದೆ. ಈ ಬಗ್ಗೆ ಸರಕಾರ ಅಧಿಕೃತ ಆದೇಶ ಹೊರಡಿಸಿದೆ. ಆದರೆ, ಲಾಕ್ ಡೌನ್ ಬಗ್ಗೆ ವಿವರವಾದ ಮಾಹಿತಿ ಹಾಗೂ ಮಾರ್ಗಸೂಚಿಗಳನ್ನು ಸೋಮವಾರದಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ.
ಜುಲೈ 14ರಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಯಲ್ಲಿರಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳನ್ನು ಲಾಕ್ ಡೌನ್ ಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಟ್ವೀಟರ್ ಮೂಲಕ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇತ್ತೀಚಿಗೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣದ ದೃಷ್ಟಿಯಿಂದ ತಜ್ಞರ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಬರುವ ಮಂಗಳವಾರ, ಜುಲೈ 14ರ ರಾತ್ರಿ 8ರಿಂದ 7 ದಿನಗಳ ವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಈ ಅವಧಿಯಲ್ಲಿ ಅಗತ್ಯ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿದ್ದು, ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು. ಈಗಾಗಲೇ ನಿಗದಿಯಾಗಿರುವಂತೆ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ನಡೆಸಲಾಗುವುದು. ಲಾಕ್ ಡೌನ್ ಸಂದರ್ಭದಲ್ಲಿ ಜನರು ಯಾವುದೇ ಆತಂಕಕ್ಕೆ ಒಳಗಾಗದೇ ಸಹಕರಿಸಲು ಸಿಎಂ ಮನವಿ ಮಾಡಿಕೊಂಡಿದ್ದಾರೆ.