ತಿರುವನಂತಪುರ, ಜು 15 (DaijiworldNews/PY): ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಎರ್ನಾಕುಲಂನ ಜಲಾಲ್, ಮಲಪ್ಪುರಂನ ಮೊಹಮ್ಮದ್ ಶಫಿ, ಕೊಂಡೋಟ್ಟಿ ಮೂಲದ ಹಮ್ಜದ್ ಅಲಿ ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೂವರು ಮಲಪ್ಪುರಂ ಮೂಲದ ರಮೀಜ್ ಅವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ, ತಿರುವನಂತಪುರಂ, ದೆಹಲಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ಚಿನ್ನ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಜಲಾಲ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.
ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ರಾಷ್ಟ್ರೀಯ ತನಿಖಾ ದಳದ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯವರೆಗೆ ಕಸ್ಟಮ್ಸ್ ಅಧಿಕಾರಿಗಳು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.