ಜಮ್ಮುಕಾಶ್ಮೀರ, ಜು.18 (DaijiworldNews/MB) : ಶುಕ್ರವಾರ ಸಂಜೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ, ಪಾಕಿಸ್ತಾನ ಸೇನೆಯು ಗುಲ್ಪುರ್ ವಲಯದ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು ಈ ಸಂದರ್ಭದಲ್ಲಿ ತಂದೆ, ತಾಯಿ ಮತ್ತು ಮಗ ಒಂದೇ ಕುಟುಂಬಕ್ಕೆ ಸೇರಿದ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಪಾಕಿಸ್ತಾನವು ಅಪ್ರಚೋದಿತ ಶೆಲ್ ದಾಳಿ ನಡೆಸಿದೆ. ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಸೂಕ್ತ ಪ್ರತಿಕ್ರಿಯೆ ನೀಡಿದೆ ಎಂದು ತಿಳಿಸಿದ್ದಾರೆ.
ಈ ವರ್ಷದ ಜನವರಿಯಿಂದ ಈವರೆಗೆ ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನವು 2,400 ಕ್ಕೂ ಅಧಿಕ ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ವರದಿ ತಿಳಿಸಿದೆ.