ಬೆಂಗಳೂರು, ಜು. 18, (DaijiworldNews/SM): ರಾಜ್ಯದಲ್ಲಿ ಕೊರೊನಾದಿಂದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಶನಿವಾರ ಮತ್ತೆ 93 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಈ ನಡುವೆ ಶನಿವಾರದಂದು ಸೋಂಕಿನ ಸಂಖ್ಯೆ ನಾಲ್ಕು ಸಾವಿರದ ಗಡಿ ದಾಟಿದ್ದು, 4537 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ. ಅಲ್ಲದೆ ಸಾವಿನ ಸಂಖ್ಯೆ 1240ಕ್ಕೆ ಹೆಚ್ಚಳವಾಗಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ಶನಿವಾರದಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೇ ಅತ್ಯಧಿಕ ಪ್ರಕರಣಗಳು ಪಾಸಿಟಿವ್ ಆಗಿವೆ. ಒಂದೇ ದಿನ 2125 ಮಂದಿಯಲ್ಲಿ ಬೆಂಗಳೂರಿನಲ್ಲಿ ಸೋಂಕು ಪತ್ತೆಯಾಗಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದರೆ, ಮತ್ತೊಂದೆಡೆ ಗುಣಮುಖರಾಗುವವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ. ಶನಿವಾರದಂದು ರಾಜ್ಯದಲ್ಲಿ ಒಟ್ಟು 1018 ಮಂದಿ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 36,631 ಮಂದಿ ಬೇರೆ ಬೇರೆ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ 22,498 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.