ಬೀದರ್, ಜು 25 (Daijiworld News/MSP): ಗೋ ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ ಭರವಸೆ ನೀಡಿದ್ದಾರೆ.
ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು , ದೇಶದ ಹಲವು ರಾಜ್ಯದಲ್ಲಿ ಈ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ನಮ್ಮ ರಾಜ್ಯದಲ್ಲೂ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರವೇ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಗೋಹತ್ಯೆ ನಿಷೇಧದ ಕುರಿತು ಗುಜರಾತ್ ಮತ್ತು ಉತ್ತರ ಪ್ರದೇಶಲ್ಲಿರುವ ಕಾಯ್ದೆಯ ಬಗ್ಗೆಯೂ ಅಧ್ಯಯನ ನಡೆಸಲಾಗುವುದು. ರಾಜ್ಯದಲ್ಲಿ ಕೊರೊನಾ ಸಾಂಕ್ರಮಿಕ ರೋಗದ ನಿಯಂತ್ರಣ ಬಂದ ಬಳಿಕ ತಜ್ಞರ ತಂಡವನ್ನು ರಚಿಸಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕಾಯ್ದೆಯನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
"ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸುವ ದೃಷ್ಟಿಯಿಂದ ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ. ಇನ್ನು ಜಾನುವಾರುಗಳ ಆರೋಗ್ಯದ ಹಿತದೃಷ್ಟಿಯಿಂದ ಶೀಘ್ರವೇ 16 ಅಂಬುಲೆನ್ಸ್ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತದೆ" ಎಂದು ಮಾಹಿತಿ ನೀಡಿದ್ದಾರೆ.