ನವದೆಹಲಿ, ಜು 26 (DaijiworldNews/PY): ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಕೋರಿ ಬರೆದ ಪತ್ರವನ್ನು ಪ್ರಧಾನಿ ಮೋದಿ ಅವರು ಅಂಗೀಕಾರ ಮಾಡಿದ್ದಾರೆ.
ಸುಬ್ರಮಣಿಯನ್ ಸ್ವಾಮಿ ಅವರು ಬರೆದಿರುವ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಪತ್ರ ಬರೆದ ಪ್ರಧಾನಿ ಮೋದಿ ಅವರು, ಜು 15ರಂದು ನೀವು ಬರೆದಿರುವ ಪತ್ರ ನನಗೆ ದೊರೆತಿದೆ ಎಂದು ತಿಳಿಸಿದ್ದಾರೆ.
ಜೂನ್ 14ರಂದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮುಂಬೈಯಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಅಸಹಜ ಸಾವಾಗಿದ್ದು, ಈ ವಿಚಾರವಾಗಿ ತನಿಖೆಯಾಗಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.
ಸುಶಾಂತ್ ಸಿಂಗ್ ಅವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ನಡುವೆ ಸುಬ್ರಮಣಿಯನ್ ಸ್ವಾಮಿ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದರು. ಈ ವಿಚಾರವಾಗಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುವಂತೆ ತಿಳಿಸಿದ್ದರು.