ಬೆಂಗಳೂರು,ಜು 28 (Daijiworld News/MSP): "ಪಕ್ಷಗಳನ್ನು ಒಡೆಯುವ, ಶಾಸಕರನ್ನು ಖರೀದಿಸುವ ವ್ಯವಹಾರದಲ್ಲಿ ಕಾಂಗ್ರೆಸ್ ಪಕ್ಷ ನಿಪುಣತೆ ಹೊಂದಿದ್ದು ‘ಕುದುರೆ ವ್ಯಾಪಾರ’ ಎಂಬ ಭಾಷೆ ಹುಟ್ಟಿದ್ದೇ ಕಾಂಗ್ರೆಸ್ಸಿನಿಂದ" ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ ಅವರು, ಶಾಸಕರ ಖರೀದಿ ವಿಚಾರವಾಗಿ ದೊಡ್ಡ ಗಂಟಲು ಮಾಡುತ್ತಿರುವ ಕಾಂಗ್ರೆಸ್ ಹಿಂದೆ ಜೆಡಿಎಸ್ ಅನ್ನು ಒಡೆದಿಲ್ಲವೇ? ಒಡೆಯಲು ಪ್ರಯತ್ನಗಳನ್ನು ಮಾಡಲಿಲ್ಲವೇ? ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂಟು ಮಂದಿಯನ್ನು ಕೇವಲ ರಾಜ್ಯಸಭೆ ಚುನಾವಣೆಗಾಗಿ ಖರೀದಿಸಲಿಲ್ಲವೇ? ಇದು ಪ್ರಜಾಸತ್ತಾತ್ಮಕವೇ? ಖರೀದಿ ವಿಚಾರದಲ್ಲಿ ಎರಡೂ ಪಕ್ಷಗಳೂ 'ಅಪರಾಧಿ'ಗಳೇ ಎಂದು ಆರೋಪಿಸಿದ್ದಾರೆ.
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ “ಪ್ರಜಾಪ್ರಭುತ್ವ ಉಳಿಸಿ” ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್ ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ? . ಸರ್ಕಾರ ರಚಿಸಲು ಬೆಂಬಲ ಕೊಟ್ಟವರನ್ನೇ ಕುತಂತ್ರದಿಂದ ಸೆಳೆದುಕೊಳ್ಳುವುದು, ಇಡೀ ಪಕ್ಷವನ್ನೇ ವಿಲೀನ ಮಾಡಿಸಿಕೊಳ್ಳುವುದು ಪ್ರಜಾಪ್ರಭುತ್ವ ನಡೆಯೇ? ಸಮಾನ ಮನಸ್ಕ ಪಕ್ಷಗಳನ್ನು ಒಡೆದು ಶಾಸಕರನ್ನು ಸೆಳೆಯುತ್ತಿದ್ದರೆ ನಿಮಗೆ ಯಾರು ಬೆಂಬಲ ಕೊಟ್ಟಾರು. ಈ ತಪ್ಪುಗಳು ನಿಮಗೆ ಕಾಣುತ್ತಿಲ್ಲವೇ? ಎಂದು ಕಾಂಗ್ರೆಸ್ ಪಕ್ಷವನ್ನು ಸರಣಿ ಪ್ರಶ್ನೆಗಳ ಮೂಲಕ ಕುಮಾರುಸ್ವಾಮಿ ಕುಟುಕಿದ್ದಾರೆ.